ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ, ಸಧ್ಯದ ನಿಯಮ ಜನವರಿ 31ರವರೆಗೂ ಮುಂದುವರೆಸುವ ಸಾದ್ಯತೆ
ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಅವಧಿ ನಾಳೆ ಮುಗಿಯಲಿದ್ದು, ನಾಳೆಯಿಂದ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಬೇಕೇ ಎಂಬುದರ ಬಗ್ಗೆ ಹಾಗೂ ಸಧ್ಯದ ನಿಯಮ ಜನವರಿ 31ರವರೆಗೂ ಮುಂದುವರೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಶಾಲಾ-ಕಾಲೇಜುಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಿಟ್ಟಿನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸುವಂತೆಯೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಲಿದ್ದಾರೆ. ಅಲ್ಲದೇ ಫೆಬ್ರವರಿ ಮೊದಲ ವಾರದಲ್ಲಿ ಕೋವಿಡ್ ಕೇಸ್ ಮತ್ತಷ್ಟು ಹೆಚ್ಚುವ ಸಾಧ್ಯತೆ ದಟ್ಟವಾಗಿರುವುದರಿಂದ ರಾಜ್ಯಾದ್ಯಂತ ಕೆಲ ವಾರ ಬಿಗಿ ನಿಯಮ ಜಾರಿಗೊಳಿಸುವ ಅಗತ್ಯವಿದೆ ಎಂಬ ಸಲಹೆ ಈಗಾಗಲೇ ರಾಜ್ಯ ಸರ್ಕಾರದ ಮುಂದೆ ಬಂದಿದೆ ಎನ್ನಲಾಗಿದೆ.
ಅಲ್ಲದೇ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ನಿಗಾ ವಹಿಸುವ ನಿಟ್ಟಿನಲ್ಲಿ ಹಲವು ಮುಂಜಾಗೃತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಒಟ್ಟಾರೆ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಮತ್ತಷ್ಟು ಟಫ್ ರೂಲ್ಸ್ ಬಗ್ಗೆ ಸಿಎಂ ನೇತೃತ್ವದಲ್ಲಿ ಇಂದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.