ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ


ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು (ಮಂಗಳವಾರ) ರಾತ್ರಿ ನಿಧನರಾದರು.


ನಗರದ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. 

ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಆಹಾರ ಹಾಗೂ ಅರಣ್ಯ ಖಾತೆಯನ್ನು ನಿರ್ವಹಿಸುತ್ತಿದ್ದರು.

ಜನತಾ ಪರಿವಾರದ ಹಿನ್ನೆಲೆ ಹೊಂದಿದ್ದ ಉಮೇಶ್ ಕತ್ತಿ 1985 ರಲ್ಲಿ ತಮ್ಮ ತಂದೆ ವಿಶ್ವನಾಥ್ ಕತ್ತಿ ನಿಧನ ನಂತರ ರಾಜ್ಯ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಮೊದಲ ಪ್ರಯತ್ನ ದಲ್ಲೇ ಶಾಸಕರಾಗಿ ಆಯ್ಕೆಯಾದರು. ನಂತರ ಕಾಂಗ್ರೆಸ್ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿನಿಂದ ಬೆಳಗಾವಿಗೆ ಸ್ಥಳಾಂತರಿಸಿ, ಅಲ್ಲಿನ ಶಿವಬಸನ ನಗರದಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ, ಆನಂತರ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.


'ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ'

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

Previous Post Next Post