ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ, ಬೇರೆ ರಾಜ್ಯಗಳ ಸಿಎಂ ಗಳಿಗೆ ಆಹ್ವಾನ
ಬೆಂಗಳೂರು: ನಾಳೆ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ದೇಶದ ವಿವಿಧ ಗಣ್ಯರು ಭಾಗಿಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಇನ್ನು ಬೇರೆ ರಾಜ್ಯಗಳ ಸಿಎಂಗಳಿಗೂ ಕಾಂಗ್ರೆಸ್ ಆಹ್ವಾನ ಕಳಿಸಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರಿಗೆ ಆಹ್ವಾನ ಮಾಡಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ತಮ್ಮ ಪರವಾಗಿ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಒಂದೇ ವಿಮಾನದಲ್ಲಿ ನಿಯೋಜಿತ ಸಿಎಂ ಡಿಸಿಎಂ ಮತ್ತೆ ದಿಲ್ಲಿಗೆ ಪಯಣ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ನವದೆಹಲಿಗೆ ಒಂದೇ ವಿಮಾನದಲ್ಲಿ ತೆರಳುತ್ತಿದ್ದು, ಇದಕ್ಕಾಗಿ ವಿಶೇಷ ವಿಮಾನ ಈಗಾಗಲೇ ಸಿದ್ಧವಾಗಿ ನಿಂತಿದೆ.
ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ನಾಳಿನ ಪ್ರಮಾಣವಚನ ಕಾರ್ಯಕ್ರಮಕ್ಕೆ ಪಕ್ಷದ ನಾಯಕರನ್ನು ಸ್ವಾಗತಿಸುವುದರ ಜೊತೆಗೆ ನೂತನ ಸಂಪುಟದಲ್ಲಿ ಯಾರ್ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.