ರಾಜ್ಯಕ್ಕೆ ಮುಂಗಾರು ಪ್ರವೇಶ: ಐದು ದಿನ ಭಾರೀ ಮಳೆ; ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕಕ್ಕೆ ಶನಿವಾರ ಮುಂಗಾರು ಮಳೆಯ ಪ್ರವೇಶವಾಗಿದ್ದು, ಮುಂದಿನ 5 ದಿನ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ. ಜೂ. 13 ರಿಂದ 15 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗಾಳಿಯ ವೇಗ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳು ಹೆಚ್ಚಾಗಬಹುದು. ಹೀಗಾಗಿ ಮುಂದಿನ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.